ಬೆಂಗಳೂರು: ನಿರಂತರ ಯೋಗಾಭ್ಯಾಸದಿಂದ ಆರೋಗ್ಯವಂತ ಜೀವನವನ್ನು ಸಾಗಿಸಲು ಸಾಧ್ಯವಾಗುತ್ತದೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷರಾದ ತೇಜಸ್ವಿನಿ ಅನಂತಕುಮಾರ್ ಅವರು ಅಭಿಪ್ರಾಯಪಟ್ಟರು.
ಬೆಂಗಳೂರಿನ ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಸೋಮವಾರ ಬೆಳಿಗ್ಗೆ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಕೋವಿಡ್‍ನಂತಹ ಸಾಂಕ್ರಾಮಿಕದ ಕಾಲಘಟ್ಟದಲ್ಲಿ ನಾವು ಇದ್ದು ಯೋಗಾಭ್ಯಾಸ, ಪ್ರಾಣಾಯಾಮ, ವ್ಯಾಯಾಮದಂತಹ ಆರೋಗ್ಯಕ್ಕೆ ಪೂರಕ ಚಟುವಟಿಕೆಗಳಲ್ಲಿ ನಮ್ಮನ್ನು ನಾವು ತೊಡಗಿಸಿಕೊಳ್ಳಬೇಕು. ಇವುಗಳು ಆರೋಗ್ಯವಂತ ಬದುಕಿಗೆ ನೆರವಾಗಬಲ್ಲದು ಎಂದು ಅವರು ನುಡಿದರು.
ಚಲನಚಿತ್ರ ನಟಿ ಅನುಪ್ರಭಾಕರ್ ಮಾತನಾಡಿ, ಚಿಕ್ಕವಯಸ್ಸಿನಿಂದಲೇ ತಾನು ಯೋಗವನ್ನು ಅಳವಡಿಸಿಕೊಂಡಿರುವುದರಿಂದಾಗಿ ತನಗೆ ಕೊರೋನಾ ಪಾಸಿಟಿವ್ ಬಂದಾಗ ಅದನ್ನು ಹೇಗೆ ಪರಿಣಾಮಕಾರಿಯಾಗಿ ಗುಣಮುಖರಾಗಲು ಮತ್ತು ಮಾನಸಿಕವಾಗಿ ಎದುರಿಸಲು ಸಾಧ್ಯವಾಯಿತು ಎಂಬುದನ್ನು ತಿಳಿಸಿದರು.
ಶಸ್ತ್ರಚಿಕಿತ್ಸಕ ಡಾ. ಆಂಜನಪ್ಪ ಅವರು ಕೋವಿಡ್ ಸಂದರ್ಭದಲ್ಲಿ ಅಳವಡಿಸಿಕೊಳ್ಳಬೇಕಾದ ಜೀವನ ಶೈಲಿಯ ಕುರಿತು ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿಗಳು ಮತ್ತು ವಿಧಾನಪರಿಷತ್ ಸದಸ್ಯ ಎನ್ ರವಿಕುಮಾರ್, ರಾಜ್ಯ ಕಾರ್ಯಾಲಯ ಕಾರ್ಯದರ್ಶಿ ಲೋಕೇಶ್ ಅಂಬೆಕಲ್ಲು ಅವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡಿದ್ದರು.